ಈಶ್ವರಪ್ಪ ಬಂಧನಕ್ಕಾಗಿ ಚಿಕ್ಕಮಗಳೂರಿನಲ್ಲಿ ಕಾಂಗ್ರೆಸ್ ಪ್ರತಿಭಟನೆ.. ಮಾಜಿ ಸಿಎಂ ಸಿದ್ದರಾಮಯ್ಯ ಭಾಗಿ
ಚಿಕ್ಕಮಗಳೂರು: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಸಿಲುಕಿ ರಾಜೀನಾಮೆ ನೀಡಿರುವ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪರನ್ನು ಬಂಧಿಸಬೇಕು ಎಂದು ಆಗ್ರಹಿಸಿ ಚಿಕ್ಕಮಗಳೂರು ನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಬೃಹತ್ ಪ್ರತಿಭಟನೆ ನಡೆಸಲಾಗುತ್ತಿದೆ.
ಜಿಲ್ಲಾ ಕಾಂಗ್ರೆಸ್ ನಡೆಸುತ್ತಿರುವ ಪ್ರತಿಭಟನೆಗೆ ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಭಾಗವಹಿಸಿ ಸಾಥ್ ನೀಡುವ ಮೂಲಕ ಪ್ರತಿಭಟನೆಯನ್ನು ಕಿಚ್ಚನ್ನು ಹೊತ್ತಿಸಿದ್ದಾರೆ. ನಗರದ ಹನುಮಂತಪ್ಪ ವೃತ್ತದಿಂದ ಆಜಾದ್ ಪಾರ್ಕ್ ಸರ್ಕಲ್ವರೆಗೂ ಪ್ರತಿಭಟನಾ ರ್ಯಾಲಿ ನಡೆದಿದ್ದು, ಈ ವೇಳೆ ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿದ್ದರು.
ಕಾಂಗ್ರೆಸ್ ನಡೆಸುತ್ತಿರುವ ಪ್ರತಿಭಟನಾ ರ್ಯಾಲಿಯಲ್ಲಿ ಈಶ್ವರಪ್ಪ ಬಂಧನಕ್ಕೆ ಆಗ್ರದ ಜೊತೆಗೆ ಬೆಲೆ ಏರಿಕೆಯ ವಿರುದ್ಧವೂ ಘೋಷಣೆ ಕೂಗಲಾಯಿತು. ಅಲ್ಲದೇ, ಸಿಲಿಂಡರ್ ಅಣಕು ಶವಯಾತ್ರೆ ಮಾಡುವ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಲಾಯಿತು.