ಮಹಿಳೆಯೊಬ್ಬರ ಖಾಸಗಿ ವೀಡೀಯೋ ಫೇಸ್‌ಬುಕ್ ನಲ್ಲಿ ಅಪ್‌ಲೋಡ್ : ಮಹಿಳೆ ಸೇರಿದಂತೆ ಇಬ್ಬರ ಬಂಧನ
ಶಿವಮೊಗ್ಗ : ಮಹಿಳೆಯೊಬ್ಬರ ಖಾಸಗಿ ವೀಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಪ್ರಕರಣವನ್ನು ಶಿವಮೊಗ್ಗ ಸೈಬರ್ ಅಪರಾಧ ಪೊಲೀಸರು ಭೇದಿಸಿದ್ದು, ಈ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ.
ಬಂಧಿತರನ್ನು ಹೊಸನಗರ ನಿವಾಸಿ ಸೀಮಾ ಕಿರಣ್ ಹಾಗೂ ಬೆಂಗಳೂರಿನ ನಿಶಾಂತ್ ಎಂದು ಗುರುತಿಸಲಾಗಿದೆ. ಇವರ ವಿರುದ್ಧ ಶಿವಮೊಗ್ಗದ ಸೆನ್ (ಸೈಬರ್ ಕ್ರೈಂ) ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಿದ ಶಿವಮೊಗ್ಗದ ಸೆನ್ (ಸೈಬರ್ ಕ್ರೈಂ) ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.
ಲಭ್ಯವಾದ ಮಾಹಿತಿಯ ಪ್ರಕಾರ, ರಿಪ್ಪನ್‌ಪೇಟೆ ಠಾಣೆ ವ್ಯಾಪ್ತಿಯ ಮಹಿಳೆಯೊಬ್ಬರ ಖಾಸಗಿ ವೀಡಿಯೋವನ್ನು ಅವರ ಅರಿವಿಗೆ ಬಾರದಂತೆ ಸಾಮಾಜಿಕ ಜಾಲತಾಣವಾದ ಫೇಸ್‌ಬುಕ್‌ನಲ್ಲಿ “Shylaja SMG” ಎಂಬ ನಕಲಿ ಐಡಿಯನ್ನು ಸೃಷ್ಟಿಸಿ ಅದರಲ್ಲಿ ವೀಡಿಯೋವನ್ನು ಅಪ್‌ಲೋಡ್ ಮಾಡಲಾಗಿತ್ತು. ಈ ಮೂಲಕ ಮಹಿಳೆಯ ಮಾನಹಾನಿ ಮಾಡುವ ಉದ್ದೇಶದಿಂದ ಆರೋಪಿಗಳು ಈ ಕೃತ್ಯ ಎಸಗಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ ಎಂದು ತಿಳಿದುಬಂದಿದೆ.
ಈ ವಿಷಯ ತಿಳಿದ ಮಹಿಳೆ ಸಂಬಂಧಪಟ್ಟ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಸೈಬರ್ ತಂತ್ರಜ್ಞಾನ ಸಹಾಯದಿಂದ ಆರೋಪಿಗಳ ಪತ್ತೆಗೆ ಮುಂದಾಗಿದ್ದರು. ತನಿಖೆಯ ವೇಳೆ ನಕಲಿ ಐಡಿ ಬಳಸಿ ವೀಡಿಯೋ ಹರಿಬಿಟ್ಟಿರುವುದು ಪತ್ತೆಯಾಗಿದ್ದು, ಆರೋಪಿಗಳ ಸುಳಿವು ದೊರೆತ ಹಿನ್ನೆಲೆ ಇಬ್ಬರನ್ನೂ ಬಂಧಿಸಲಾಗಿದೆ. ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಪ್ರಕರಣ ಸಂಬಂಧ ಇನ್ನಷ್ಟು ವಿಚಾರಣೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಘಟನೆ ಸಾಮಾಜಿಕ ಜಾಲತಾಣಗಳನ್ನು ದುರುಪಯೋಗಪಡಿಸಿಕೊಂಡು ಖಾಸಗಿ ಮಾಹಿತಿಯನ್ನು ಹರಿಬಿಡುವ ಅಪಾಯಗಳ ಬಗ್ಗೆ ಎಚ್ಚರಿಕೆ ನೀಡುವಂತಾಗಿದೆ. ಇಂತಹ ಪ್ರಕರಣಗಳಲ್ಲಿ ಕಾನೂನು ಕ್ರಮ ಕಠಿಣವಾಗಿದ್ದು, ಅಪರಾಧಿಗಳು ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
Tags:
ಕ್ರೈಂ ಸುದ್ದಿ